ಸುರತ್ಕಲ್ : ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ಯುವಕನ ವಿರುದ್ಧ ಪೋಕ್ಸೊ ಕಾಯಿದೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಪೊಲೀಸರ ಮಾಹಿತಿಯ ಪ್ರಕಾರ, ಗಂಜಿಮಠ ಮೂಲದ ಅನೀಶ್ ಪೂಜಾರಿ ಎಂಬಾತ ಕಾಟಿಪಳ್ಳದ ಅಪ್ರಾಪ್ತ ಬಾಲಕಿಯೊಂದಿಗೆ ಪ್ರೇಮ ಸಂಬಂಧ ಬೆಳೆಸಿದ್ದ ಎನ್ನಲಾಗಿದೆ. ಈ ಸಂಬಂಧದ ಹಿನ್ನೆಲೆಯಲ್ಲಿ ಬಾಲಕಿ ಗರ್ಭಿಣಿಯಾಗಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗರ್ಭಧಾರಣೆಯ ವಿಷಯವನ್ನು ಬಾಲಕಿ ತಿಳಿಸಿದ ಬಳಿಕ ಅನೀಶ್ ಅದನ್ನು ಒಪ್ಪಿಕೊಳ್ಳದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಜೂನ್ 22ರ ರಾತ್ರಿ ಬಾಲಕಿ ತನ್ನ ತಾಯಿಗೆ ನಡೆದ ವಿಚಾರವನ್ನು ತಿಳಿಸಿದ್ದಳು. ಬಳಿಕ ತಾಯಿ ಆಕೆಯನ್ನು ಸಮಾಧಾನಪಡಿಸಿ ಮರುದಿನ ಕೆಲಸಕ್ಕೆ ತೆರಳಿದ್ದರು. ನಂತರ ಮನೆಗೆ ಹಿಂದಿರುಗಿದಾಗ ಬಾಲಕಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಮೃತಳ ತಾಯಿ ನೀಡಿದ ದೂರಿನ ಆಧಾರದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅನೀಶ್ ಪೂಜಾರಿ ವಿರುದ್ಧ ಪೋಕ್ಸೊ ಕಾಯಿದೆ, ಅತ್ಯಾಚಾರ ಹಾಗೂ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪಗಳಡಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣ ದಾಖಲಾದ ಬಳಿಕ ಆರೋಪಿ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಆರೋಪಿಯನ್ನು ಬಂಧಿಸಲು ವಿಶೇಷ ತಂಡವನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಡಿಎನ್‌ಎ ಪರೀಕ್ಷೆಗಾಗಿ ವೈದ್ಯರು ಭ್ರೂಣದ ಮಾದರಿಯನ್ನು ಸಂಗ್ರಹಿಸಿರುವುದಾಗಿ ಅವರು ಹೇಳಿದ್ದಾರೆ.
ಇದೇ ವೇಳೆ, ಬಾಲಕಿ ಬರೆದಿರುವ ಡೆತ್ ನೋಟ್‌ನಲ್ಲಿ ಕೆಲವು ವೈಯಕ್ತಿಕ ಉಲ್ಲೇಖಗಳು ಕಂಡುಬಂದಿದ್ದು, ಅವುಗಳನ್ನೂ ತನಿಖೆಯ ಭಾಗವಾಗಿ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮತ್ತಷ್ಟು ಓದಿ :
ಬೆಳ್ತಂಗಡಿ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಬಜಪೆಯಲ್ಲಿ ಎನ್‌ಐಎ ಅಧಿಕಾರಿಗಳಿಂದ ಮತ್ತೆ ವಿಚಾರಣೆ











2 thoughts on “ಸುರತ್ಕಲ್‌ನಲ್ಲಿ ಅಪ್ರಾಪ್ತೆಯ ಆತ್ಮಹತ್ಯೆ ಪ್ರಕರಣ : ಪೋಕ್ಸೊ, ಅತ್ಯಾಚಾರ ಹಾಗೂ ಆತ್ಮಹತ್ಯೆಗೆ ಪ್ರೇರಣೆ ಆರೋಪದಡಿ ಯುವಕನ ವಿರುದ್ಧ ಎಫ್‌ಐಆರ್”